ಹೊಸದಿಗಂತ ವರದಿ ಕಲಬುರಗಿ:
ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವವನ್ನು ಕಲಬುರಗಿ ಸೇರಿ ಪ್ರದೇಶದಾದ್ಯಂತ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಸೂಚಿಸಿದರು.
ಶನಿವಾರ ಕೆ.ಕೆ.ಆರ್.ಡಿ.ಬಿ. ಮಂಡಳಿ ಸಭಾಂಗಣದಲ್ಲಿ ಕಲಬುರಗಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಥವಾ ಗೃಹ ಸಚಿವ ಅಮಿತ್ ಷಾ ಅವರನ್ನು ಕರೆತರುವ ಪ್ರಯತ್ನ ನಡೆದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರುವುದು ಖಚಿತವಾಗಿದೆ. ಹೀಗಾಗಿ ಅಧಿಕಾರಿಗಳು ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸುವಂತೆ ತಿಳಿಸಿದರು.
ಸೆ.17 ರಂದು ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದ ನಂತರ ನಗರದ ಎನ್.ವಿ.ಮೈದಾನದಲ್ಲಿ ಕಲಬುರಗಿ ಕೇಂದ್ರಿತವಾಗಿ ಐತಿಹಾಸಿಕ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಿ ವಿವಿಧ ಇಲಾಖೆಯ ಮಹತ್ವಕಾಂಕ್ಷೆ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಲಿದ್ದಾರೆ. ಸುಮಾರು 50 ಸಾವಿರ ಜನಸಂಖ್ಯೆ ಸೇರುವ ನಿರೀಕ್ಷೆಯಿದ್ದು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಣೆಗೆ ಇಂದಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಇನ್ನೂ ಪ್ರದೇಶದ ಆಯಾ ಜಿಲ್ಲೆಗಳಲ್ಲಿ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಆಯೋಜನೆಗೆ ಜಿಲ್ಲಾಧಿಕಾರಿಗಳಿಗೆ ಮಂಡಳಿಯಿಂದ ಪತ್ರ ಬರೆಯಲಾಗಿದೆ ಎಂದು ದತ್ತಾತ್ರೇಯ ಪಾಟೀಲ ರೇವೂರು ತಿಳಿಸಿದರು.
ಅಂದು ಮುಖ್ಯಮಂತ್ರಿಗಳು ನೀತಿ ಆಯೋಗ ಗುರುತಿಸಿರುವ ಕಲ್ಯಾಣ ಕರ್ನಾಟಕ ಭಾಗದ ರಾಯಚೂರು, ಯಾದಗಿರಿ ಮಹತ್ವಕಾಂಕ್ಷೆ ಜಿಲ್ಲೆಗಳಿಗೆ ಕೆಲವೊಂದು ಯೋಜನೆಗಳನ್ನು ಘೋಷಿಸಲಿದ್ದಾರೆ. ಅಲ್ಲದೆ ಆಯವ್ಯಯದಲ್ಲಿ ಘೋಷಿಸಿದಂತೆ ಎಲಿವೇಟ್ ಕಲ್ಯಾಣ ಕರ್ನಾಟಕದಡಿ ಸ್ಟಾರ್ಟ್ ಅಪ್ ಕಂಪನಿಗಳಿಗೆ 50 ಲಕ್ಷ ರೂ. ಸಹಾಯಧನ ಸಹ ನೀಡಲಾಗುತ್ತಿದೆ. ಸಮಾರಂಭ ಸ್ಥಳದಲ್ಲಿ ಕಂದಾಯ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ತೋಟಗಾರಿಕೆ, ಕೃಷಿ, ಕಾರ್ಮಿಕ, ಕೌಶಲ್ಯ ಹೀಗೆ ಪ್ರಮುಖ ಇಲಾಖೆಗಳು ಮಳಿಗೆ ಹಾಕಿ ಸರ್ಕಾರಿ ಯೋಜನೆಗಳ ಕುರಿತು ಬಂದಂತಹ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ದತ್ತಾತ್ರೇಯ ಪಾಟೀಲ ರೇವೂರ ಸೂಚಿಸಿದರು.
