ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲೇ ಬಾಂಬ್ ಬೆದರಿಕೆ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಬಂದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬಾಂಬ್ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದಾರೆ. ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನಿಲ್ದಾಣದ ಅಧಿಕೃತ ಮೇಲ್ ಐಡಿಗೆ 666darktriad666@gmail.com ಇಮೇಲ್ ವಿಳಾಸದಿಂದ ‘Terrorzers111’ ಗುಂಪಿನಿಂದ ಬಾಂಬ್ ಬೆದರಿಕೆ ಮೇಲ್ ಬಂದಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.
ವಿಮಾನದಲ್ಲಿ ಟೈಂ ಬಾಂಬ್ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಗುಂಪಿನಿಂದ ಟರ್ಮಿನಲ್ 1 ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ ಎಂದು ಮೇಲ್ ಬಂದಿದೆ ಎಂದು ವಿಮಾನ ನಿಲ್ದಾಣ ಸಿಬ್ಬಂದಿ ತಿಳಿಸಿದರು.
